*ನವೀಕರಣಗೊಂಡ ಚನ್ನಮ್ಮ ವೃತ್ತ ಉದ್ಘಾಟಿಸಿ ಪ್ರತಿಮೆಗೆ ಹೂ ಮಾಲೆ ಅರ್ಪಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ*

Share The News

ಬೆಳಗಾವಿ  : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೋವಿಡ್ ಸೋಂಕು ಸಂದರ್ಭದಲ್ಲಿಯೂ ಜನಪರ ಕಾರ್ಯಕ್ರಮಗನ್ನು ರೂಪಿಸುವುದರ ಜತೆಗೆ ಪ್ರವಾಹ ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ದೃಢ ಸಂಕಲ್ಪ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.


ನಗರದ ಸಿಪಿಎಡ್ ಮೈದಾನದಲ್ಲಿ ರಾಜ್ಯೋತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಅವರು, ಪ್ರತಿ ವರ್ಷ ಕರ್ನಾಟಕ  ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆ ಅತ್ಯಂತ ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ ಎಂದರು.
ಬೆಳಗಾವಿ ಜಿಲ್ಲೆಯೂ ತನ್ನದೆಯಾದ ಇತಿಹಾಸ ಹೊಂದಿದೆ. ಬ್ರಿಟೀಷರೊಡನೆ ಸ್ವಾತಂತ್ಹೋರಾಟಕ್ಕೆ ನಾಂದಿ ಹಾಡಿದ ಕಿತ್ತೂರಿನ ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಪ್ರಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ಮಲ್ಲಮ್ಮ ನಮ್ಮ ನಾಡಿನ ಧೀಮಂತ ಶಕ್ತಿ ಎಂಬುದು ಸರ್ವವಿದಿತ.

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧಿವೇಶನವು ೧೯೨೪ರಲ್ಲಿ ನಮ್ಮ ಬೆಳಗಾವಿಯ ಪುಣ್ಯಭೂಮಿಯಲ್ಲಿಯೇ ನಡೆದಿತ್ತು ಎಂಬುದು ಬೆಳಗಾವಿಯ ಹಿರಿಮೆ.
ಅದೇ ರೀತಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಚಿಕ್ಕೋಡಿ ನ್ಯಾಯಾಲಯದ ಪ್ರಕರಣವೊಂದರಲ್ಲಿ ವಕಾಲತ್ತು ವಹಿಸಿದ್ದು, ಈ ನೆಲದ ಇನ್ನೊಂದು ವಿಶೇಷ. ಅಲ್ಲದೇ ಸಮಾನತೆಯನ್ನು ಸಾರಲು ಜಾತಿ ಭೇದವನ್ನು ತೊಡೆದು ಹಾಕಲು ವಿಶೇಷವಾಗಿ ಅಸ್ಪೃಶ್ಯತೆಯ ನಿವಾರಣೆಗಾಗಿ ಬಹಿಷ್ಕೃತ ಹಿತಕರಣಿ ಸಭಾ ಮೂಲಕ ಜಿಲ್ಲೆಯ ನಿಪ್ಪಾಣಿಯಲ್ಲಿ ಚಳುವಳಿಯನ್ನು ರೂಪಿಸಿದ್ದು ನಮಗೆಲ್ಲ ಹೆಮ್ಮೆಯ ವಿಷಯ.
ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಬೆಳಗಾವಿ ಜಿಲ್ಲೆಯಿಂದ ಹಲವಾರು ಮಹನೀಯರು ಕ್ರಿಯಾಶೀಲರಾಗಿ ಹೋರಾಡಿದ್ದು, ಬೈಲಹೊಂಗಲದ ಗಂಗಾಧರ ತುರಮುರಿ, ಹುದಲಿಯ ಸ್ವಾತಂತ್ರ್ಯ ಯೋಧರಾದ ಗಂಗಾಧರರಾವ್ ದೇಶಪಾಂಡೆ, ಚಿಂಚಲಿಯ ರಾಷ್ಟ್ರೀಯವಾದಿ ಆರ್.ಎಸ್.ಹುಕ್ಕೇರಿ, ತ್ರಿವಿಧ ದಾಸೋಹಿ ನಾಗನೂರ ಶಿವಬಸವ ಸ್ವಾಮೀಜಿ ಮೊದಲಾದವರ ಕೊಡುಗೆ ಅವಿಸ್ಮರಣೀಯವಾಗಿದೆ ಎಂದರು.

ಬೆಳಗಾವಿ ಜಿಲ್ಲಾಡಳಿತದಿಂದ 19 ಜನ ಕೋವಿಡ್ ವಾರಿಯರ್ಸ್ ಗಳಿಗೆ ಸಚಿವ ರಮೇಶ್ ಜಾರಕಿಹೊಳಿ 65ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ವೇದಿಕೆ ಕಾರ್ಯಕ್ರಮ ಬಳಿಕ ನಗರದ ಹೃದಯ ಭಾಗದಲ್ಲಿರುವ ವೀರರಾಣಿ  ಕಿತ್ತೂರು ಚನ್ನಮ್ಮ ಪತ್ರಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕ ಅನಿಲ್ ಬೆನಕೆ,  ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಮಹಾಂತೇಶ ‌ಹಿರೇಮಠ, ನಗರ ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಎಸ್ಪಿ‌ ಲಕ್ಷ್ಮಣ ‌ನಿಂಬರಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Share The News

Leave a Reply

Your email address will not be published. Required fields are marked *

error: Content is protected !!