ಬೆಂಗಳೂರು : ರಾಜ್ಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವಂತ 7 ಇಲಾಖೆಯ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಇತರೆ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಮಕ್ಕಳ ರಕ್ಷಣಾ ಸೇವೆಗಳನ್ನು ಒದಗಿಸುತ್ತಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು.
ನಗರಾಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಇ-ಆಡಳಿತ), ಆರ್ಥಿಕ ಇಲಾಖೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಮುಂದುವರಿದು ಇದೇ ಸುತ್ತೋಲೆಯ ದಿನಾಂಕ 27-04-2021ರಲ್ಲಿ ತಿಳಿಸಿರುವಂತೆ ಕ್ರಮ ಸಂಖ್ಯೆ 3 ರಿಂದ 6ರವರೆಗಿನ ನಿಬಂಧನೆಗಳು ಹಾಗೇ ಮುಂದುವರಿಯಲಿದೆ. ಈ ಸುತ್ತೋಲೆಯು ದಿನಾಂಕ 23-05-2021ರವರೆಗೆ ಅಸ್ತಿತ್ವದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.