ಸಿಡಿ ಪ್ರಕರಣ ಬೆಳಕಿಗೆ ಬಂದ ಬೇನ್ನೇಲ್ಲೇ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದ್ದು, ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ.
ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ಗೋಕಾಕ್ ಬಸವ ವೃತ್ತದಲ್ಲಿ ಜಮಾವಣೆಗೊಂಡಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದರೆ. ಅಲ್ಲದೇ ಸರ್ಕಾರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ಮೂವರು ಬೆಂಬಲಿಗರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಮುಂದಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಬೆಂಬಲಿಗರನ್ನು ಪೊಲೀಸರು ತಕ್ಷಣ ತಡೆದು ನಿಲ್ಲಿಸಿದ್ದಾರೆ.
ಗೋಕಾಕ್ ನ ಬಸವ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು ರಾಜೀನಾಮೆ ಅಂಗೀಕರಿಸಿದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಬೆಳಗಾವಿ ಬಂದ್ ಮಾಡುವುದಾಗಿ ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ರಾಸಲೀಲೆ ಸಿಡಿ ಪ್ರಕರಣದ ಬಗ್ಗೆ ಸಿಐಡಿ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ. ಸಚಿವರ ರಾಜೀನಾಮೆ ವಾಪಸ್ ಪಡೆಯಬೇಕು. ಸರ್ಕಾರ ರಾಜೀನಾಮೆ ಅಂಗೀಕರಿಸಬಾರದು ಎಂದು ಒತ್ತಾಯಿಸಿದ್ದಾರೆ.
ಗೋಕಾಕ್ ನಲ್ಲಿ ರಮೇಶ್ ಬೆಂಬಲಿಗರ ಆಕ್ರೋಶ ಮುಗಿಲುಮುಟ್ಟಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.